ಜೋ ಜೋ ಶ್ರೀಕೃಷ್ಣ ಪರಮಾನಂದ
ಜೋ ಜೋ ಗೋಪಿಯ ಕಂದ ಮುಕುಂದ ಜೋಜೋ ||ಪ||
ಪಾಲಗಡಲೊಳು ಪವಡಿಸಿದವನೇ
ಆಲದೆಲೆಯ ಮೇಲೆ ಮಲಗಿದ ಶಿಶುವೇ
ಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಹೊಳೆವಂಥ ರನ್ನದ ತೊಟ್ಟಿಲ ಮೇಲೆ
ಥಳಥಳಿಸುವ ಗುಲಗಂಜಿಯ ಮಾಲೆ
ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲ
ನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋಜೋ ||
ಯಾರ ಕಂದ ನೀನಾರ ನಿಧಾನೀ
ಆರ ರತ್ನವೊ ನೀನಾರ ಮಾಣಿಕವೋ
ಸೇರಿತು ಎನಗೊಂದು ಚಿಂತಾಮಣಿ ಎಂದು
ಪೋರ ನಿನ್ನನು ಪಾಡಿ ತೂಗುವೆನಯ್ಯ ಜೋಜೋ ||
ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆ
ಮನೆಯ ಕೆಲಸವಾರು ಮಾಡುವರಯ್ಯ
ಮನಕೆ ಸುಖನಿದ್ರೆ ತಂದುಕೋ ಬೇಗ
ಫಣಿಶಯನನೆ ನಿನ್ನ ಪಾಡಿ ತೂಗುವೆನು ಜೋಜೋ ||
ಅಂಡಜವಾಹನ ಅನಂತಮಹಿಮ
ಪುಂಡರೀಕಾಕ್ಷ ಶ್ರೀ ಪರಮಪಾವನ
ಹಿಂಡು ದೈವದ ಗಂಡ ಉದ್ದಂಡನೆ
ಪಾಂಡುರಂಗ ಶ್ರೀ ಪುರಂದರ ವಿಠಲ ಜೋಜೋ ||
ಸಾಹಿತ್ಯ: ಪುರಂದರದಾಸರು