ಕಲ್ಲುಸಕ್ಕರೆ ಕೊಳ್ಳಿರೋ ನೀವೆಲ್ಲರು

SANTOSH KULKARNI
By -
0 minute read
0



ಕಲ್ಲುಸಕ್ಕರೆ ಕೊಳ್ಳಿರೋ ನೀವೆಲ್ಲರು

ಕಲ್ಲುಸಕ್ಕರೆ ಕೊಳ್ಳಿರೋ
ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು
ಫುಲ್ಲಲೋಚನ ಶ್ರೀಕೃಷ್ಣನಾಮವೆಂಬ

ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿಗೆ ಗೋಣಿಯೊಳು ತುಂಬುವುದಲ್ಲ
ಎತ್ತ ಹೋದರು ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ಬರುವಂಥ

ನಷ್ಟ ಬೀಳುವುದಲ್ಲ ನಾತ ಹುಟ್ಟುವುದಲ್ಲ
ಎಷ್ಟು ಒಯ್ದರು ಬೆಲೆ ರೊಕ್ಕವಿದಕಿಲ್ಲ
ಕಟ್ಟಿರುವೆಯು ತಿಂದು ಕಡಿಮೆಯಾಗುವುದಲ್ಲ
ಪಟ್ಟಣದೊಳಗೆ ಪ್ರಸಿದ್ಧವಾಗಿರುವಂಥ

ಸಂತೆ ಸಂತೆಗೆ ಹೋಗಿ ಶ್ರಮಪಡಿಸುವುದಲ್ಲ
ಸಂತೆಯೊಳಗೆ ಇಟ್ಟು ಮಾರುವುದಲ್ಲ
ಸಂತರ ಭಕ್ತರ ನಾಲಗೆ ಸವಿಗೊಂಬ
ಕಾಂತ ಪುರಂದರವಿಠಲ ನಾಮವೆಂಬ

Post a Comment

0Comments

Post a Comment (0)
Today | 12, April 2025