ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲಿ,ನಿತ್ಯಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ…
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ…
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮೂಲೆಯಲ್ಲಿ
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ,
ಓಲೆಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ –
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ…
ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ,
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ-
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ…
– ಕೆ. ಎಸ್. ನಿಸಾರ್ ಅಹಮದ್