ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು? (2)
ಯಾವ ಬೃ೦ದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು….?ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು?
ಹೂವುಹಾಸಿಗೆ, ಚಂದ್ರ, ಚಂದನ, ಬಾಹುಬಂಧನ, ಚುಂಬನ…(2)
ಬಯಕೆ ತೋಟದ ಬೇಲಿಯೊಳಗೆ ಕರಣಗಣದೀ ರಿಂಗಣ:….
ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು? (1)
ಸಪ್ತಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ…(2)
ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ?
ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು? (1)
ವಿವಶವಾಯಿತು ಪ್ರಾಣ; ಹಾ ! ಪರವಶವು ನಿನ್ನೀ ಚೇತನ…..(2)
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ…?
ಯಾವ ಮೋಹನ ಮುರಲಿ ಕರೆಯಿತು ಇದ್ದಕಿದ್ದೋಲೆ ನಿನ್ನನು..?
ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯನು?
ಯಾವ ಮೋಹನ ಮುರಲಿ ಕರೆಯಿತು ಇದ್ದಕಿದ್ದೋಲೆ ನಿನ್ನನು..?(1)
-ಗೋಪಾಲಕೃಷ್ಣ ಅಡಿಗ